ರಾಜ್ಯ
Trending

ಮತ್ತೆ ಮಳೆರಾಯನ ಆರ್ಭಟ: ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆ

ಬೆಂಗಳೂರು, ಮೇ 02: ಸಂಜೆಯಾಗುತ್ತಿದ್ದಂತೆ ಮಳೆರಾಯ (Rain) ರಾಜಧಾನಿ ಬೆಂಗಳೂರನ್ನು (Bengaluru) ಆವರಿಸಿಕೊಳ್ಳುತ್ತಿದ್ದಾನೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಶುಕ್ರವಾರ (ಮೇ.02) ಬೆಂಗಳೂರು ನಗರದ ಕೆ.ಆರ್​.ವೃತ್ತ, ಕಾರ್ಪೊರೇಷನ್, ವಿಧಾನಸೌಧ, ಮೆಜೆಸ್ಟಿಕ್, ಗಾಂಧಿನಗರ, ಓಕಳಿಪುರಂ, ರಾಜಾಜಿನಗರ, ಗಿರಿನಗರ, ಬಸವೇಶ್ವರ ನಗರ, ಮಲ್ಲೇಶ್ವರಂ, ಆರ್.ಆರ್.ನಗರ, ವಿಜಯನಗರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ.ರಾಜ್ಯದಾದ್ಯಂತ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯಾದ್ಯಂತ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಇನ್ನು, ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ತುಂತುರು ಮಳೆ, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಒಣ ಹವೆ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಮೂಡಿಗೆರೆ ಕಳಸ ಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ದಿಢೀರ್ ಆರಂಭವಾದ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ವಾಹನ ಸವಾರರು ಪರದಾಡಿದರು. ಚಿಕ್ಕಮಗಳೂರು ನಗರದಲ್ಲಿ ರಣ ಮಳೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button